ಮೋದಿ ನಾಯಕತ್ವದಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ. ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ. ಈ ಚುನಾವಣೆಯಲ್ಲಿ ಪಕ್ಷ ಒಪ್ಪಿಗೆ ನೀಡಿದರೆ ಶಿಕಾರಿಪುರ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧಿಸುತ್ತಾನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ಬಿ.ವೈ.ವಿಜಯೇಂದ್ರ ಮತ್ತು ಬಿ.ಎಸ್.ಯಡಿಯೂರಪ್ಪ
ಬೆಂಗಳೂರು: ಪಕ್ಷದ ಹೈಕಮಾಂಡ್ ಸೂಚಿಸಿದರೆ ಶಿಕಾರಿಪುರ ಕ್ಷೇತ್ರದಿಂದ (Shikaripura Constituency) ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ಸ್ಪರ್ಧೆ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ (B.S.Yediyurappa) ಹೇಳಿದ್ದಾರೆ. ಸದ್ಯ ಯಡಿಯೂರಪ್ಪ ಅವರು ಚುನಾವಣೆಗೆ ಗುಡ್ಬೈ ಹೇಳಿದ್ದು, ಇವರು ಸ್ಪರ್ಧಿಸುತ್ತಿರುವ ಶಿಕಾರಿಪುರ ಕ್ಷೇತ್ರದ ಮುಂದಿನ ಬಿಜೆಪಿ ಅಭ್ಯರ್ಥಿ ಯಾರು ಎಂಬ ಚರ್ಚೆ ಜೋರಾಗಿದೆ. ಈ ಬಗ್ಗೆ ವಿಧಾನಸೌಧದಲ್ಲಿ ಟಿವಿ9 ಜೊತೆ ಮಾತನಾಡಿದ ಯಡಿಯೂರಪ್ಪ, ಪಕ್ಷ ಒಪ್ಪಿಗೆ ನೀಡಿದರೆ ಶಿಕಾರಿಪುರದಲ್ಲಿ ವಿಜಯೇಂದ್ರ ಸ್ಪರ್ಧಿಸುತ್ತಾನೆ. ನಾನು ರಾಜಕೀಯದಿಂದ ನಿವೃತ್ತಿಯಾಗುವ ಪ್ರಶ್ನೆಯೇ ಇಲ್ಲ, ಪಕ್ಷಕ್ಕಾಗಿ ನಿರಂತರವಾಗಿ ದುಡಿಯುತ್ತೇನೆ. ರಾಜ್ಯದ ಉದ್ದಗಲಕ್ಕೂ ನಾನು ಚುನಾವಣಾ ಪ್ರವಾಸ ಮಾಡುತ್ತೇನೆ ಎಂದರು. ಜನರ ಆಶೀರ್ವಾದದಿಂದ ವಿಧಾನಸೌಧದಲ್ಲಿ ಕೆಲಸ ಮಾಡುತ್ತಿದ್ದೇವೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ನಾಯಕತ್ವದಲ್ಲಿ ಕರ್ನಾಟಕ ರಾಜ್ಯದಲ್ಲಿ ಮತ್ತೊಮ್ಮೆ ನಾವು ಅಧಿಕಾರಕ್ಕೆ ಬರುತ್ತೇವೆ. ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಬಿಜೆಪಿ ಮತ್ತೆ ಅಧಿಕಾರಕ್ಕೆ ಏರಲಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ಅದಲ್ಲೂ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರ ಹೆಸರು ಹೆಚ್ಚು ಮುನ್ನಲೆಗೆ ಬರುತ್ತಿದೆ. ಚುನಾವಣೆ ಕಾವು ಜೋರಾಗುವ ಮುನ್ನ ಯಡಿಯೂರಪ್ಪ ಅವರು ಹಲವು ಬಾರಿ ತಾನು ಚುನಾವಣೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದರು. ಅಲ್ಲದೆ ಶಿಕಾರಿಪುರ ಕ್ಷೇತ್ರದಿಂದ ವಿಜಯೇಂದ್ರ ಸ್ಪರ್ಧಿಸುತ್ತಾನೆ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು. ಮಾತ್ರವಲ್ಲದೆ ಮುಂದಿನ ಮುಖ್ಯಮಂತ್ರಿ ವಿಜಯೇಂದ್ರ ಎಂಬ ಘೋಷಣೆಗಳು ಕೂಡ ಮೊಳಗುತ್ತಿವೆ.
ಇದನ್ನೂ ಓದಿ: ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಯಡಿಯೂರಪ್ಪ ನಿರ್ಧಾರ ಸ್ವಾಗತಿಸಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ
ಯಡಿಯೂರಪ್ಪ ಅವರು ತಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಆದರೆ ರಾಜಕೀಯದಿಂದ ನಿವೃತ್ತಿ ಹೊಂದುತ್ತಿಲ್ಲ, ಪಕ್ಷ ಸಂಘಟನೆ ನಿರಂತರವಾಗಿರಲಿದೆ ಎಂದು ಹೇಳಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ರಾಜ್ಯ ಸುತ್ತಾಟ ನಡೆಸುತ್ತಾ ತಂದೆಯಂತೆ (ಯಡಿಯೂರಪ್ಪ) ಪುತ್ರನೂ (ವಿಜಯೇಂದ್ರ) ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ವಿಜಯೇಂದ್ರ ಅವರ ಈ ನಡೆ ಮುಂದಿನ ದಿನಗಳಲ್ಲಿ ಅವರನ್ನು ಮುಖ್ಯಮಂತ್ರಿ ಸ್ಥಾನದ ಪ್ರಬಲ ಸ್ಪರ್ಧಿ, ಆಕಾಂಕ್ಷಿಯನ್ನಾಗಿ ಮಾಡಿದರೂ ಅಚ್ಚರಿ ಇಲ್ಲ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ